ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಮಣ್ಣು ಕುಸಿತ|ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ|ಕಾರ್ಮಿಕರ ಸಾವಿಗೆ ಕಾರಣರಾದವರ ಮೇಲೆ ಕ್ರಮ
ಹೊಟ್ಟೆಪಾಡಿಗಾಗಿ ದುಡಿಯಲು ಬಂದ ಅಮಾಯಕ ಜೀವಗಳು ಈ ರೀತಿ ದುರ್ಮರಣಕ್ಕೀಡಾಗಿರುವುದು ನಿಜಕ್ಕೂ ನೋವಿನ ಸಂಗತಿ. ಮುಖ್ಯಮಂತ್ರಿಗಳ ಮಾರ್ಗದರ್ಶನದಂತೆ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗ: ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.

ಮಂಗಳವಾರ ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

ಹೊಟ್ಟೆಪಾಡಿಗಾಗಿ ದುಡಿಯಲು ಬಂದ ಅಮಾಯಕ ಜೀವಗಳು ಈ ರೀತಿ ದುರ್ಮರಣಕ್ಕೀಡಾಗಿರುವುದು ನಿಜಕ್ಕೂ ನೋವಿನ ಸಂಗತಿ.
ಮುಖ್ಯಮಂತ್ರಿಗಳ ಮಾರ್ಗದರ್ಶನದಂತೆ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ. 5 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದಾರೆ.
ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.

ಅದೇ ರೀತಿ ಘಾಟ್ ಪ್ರದೇಶದಲ್ಲಿ ಸಂಚರಿಸುವ ವಾಹನ ಸವಾರರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ರಸ್ತೆ ಕುಸಿಯುವ ಸಂಭವವಿರುವ ಕಡೆಗಳಲ್ಲಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.
ಮಲೆನಾಡಿನ ಭೂಪ್ರದೇಶಕ್ಕೆ ಅನುಗುಣವಾಗಿ ತಡೆಗೋಡೆಯನ್ನು ಸದೃಢವಾಗಿ ನಿರ್ಮಿಸಬೇಕು ಮತ್ತು ಇದರಲ್ಲಿ ಯಾವುದೇ ರೀತಿಯ ವಿಳಂಬ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ.
ಮಳೆಯಿಂದ ಭೂಕುಸಿತ ಉಂಟಾಗಿದ್ದ ಹುಲಿಕಲ್ ಘಾಟ್ ಸ್ಥಳದಲ್ಲಿ ಶಾಶ್ವತ ಪರಿಹಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ.
ಮೊದಲ ಹಂತದಲ್ಲಿ ರೂ.435 ಲಕ್ಷಗಳ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ ಎಂದರು.
ಡಿಸೆಂಬರ್ನಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ.
ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 52ರ ಸರಪಳಿ 38.00 ಕಿ.ಮೀ ನಿಂದ 43.58 ಕಿ.ಮೀ ವರೆಗಿನ ಸುಮಾರು 5.58 ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.
ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಪಿಡಬ್ಲ್ಯುಡಿ ಅಧೀಕ್ಷಕ ಅಭಿಯಂತರ ಗಣೇಶ್ , ಸ್ಥಳೀಯರು ಹಾಜರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.








