ಮೆಗ್ಗಾನ್ ಆಸ್ಪತ್ರೆ ಕಾರ್ಮಿಕರ ವಜಾ ಪ್ರಕರಣ|ಗುತ್ತಿಗೆ ನೇಮಕಾತಿಯಲ್ಲಿ ಗೋಲ್ಮಾಲ್ ದಂಧೆ|ವರದಿ ನೀಡುವಂತೆ ಡಿಸಿ ಕವಳಿಕಟ್ಟಿ ಸೂಚನೆ
ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಂಡು, ಬಳಿಕ ಕಡಿಮೆ ಕಾರ್ಮಿಕರಿಂದ ಹೆಚ್ಚಿನ ಕೆಲಸವನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ನಾಮ ನಿರ್ದೇಶಿತ ಸದಸ್ಯರು ಗಮನಕ್ಕೆ ತಂದಿದ್ದಾರೆ. ಈ ರೀತಿ ಆಗದಂತೆ ಕ್ರಮ ವಹಿಸಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಎಚ್ಚರಿಕೆ ನೀಡಿದರು.

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ವಿವಿಧ ಕಾರಣಕ್ಕೆ ಕಾರ್ಮಿಕರನ್ನು ಕೆಲಸದಿಂದ ತೆಗದುಹಾಕಿ ಬೇರೆಯವರನ್ನು ನೇಮಕ ಮಾಡಿಕೊಂಡಿರುವ ಬಗ್ಗೆ ಮೆಗ್ಗಾನ ಆಸ್ಪತ್ರೆಗೆ ಭೇಟಿ ನೀಡಿ ವರದಿ ಸಲ್ಲಿಸುವಂತೇ ಜಿಲ್ಲಾ ಕಾರ್ಮಿಕ ಅಧಿಕಾರಿ ಅವರಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಆರೋಗ್ಯ ಸಮಸ್ಯೆಯ ಕಾರಣಕ್ಕೆ ದೀರ್ಘ ರಜೆ ತೆಗೆದುಕೊಂಡು ಹೋದವರನ್ನು ಕೆಲಸದಿಂದ ತೆಗೆದುಹಾಕಿರುವ ಬಗ್ಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ಅವರು ಖುದ್ದು ಭೇಟಿ ನೀಡಿ ವರದಿ ನೀಡುವಂತೆ ತಿಳಿಸಿದರು,
ಸ್ವಚ್ಚತಾಗಾರರಿಗೆ ಗುರುತಿನ ಚೀಟಿ|
ಶಿವಮೊಗ್ಗ ಜಿಲ್ಲೆಯ ವಿವಿಧ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸ್ವಚ್ಚತೆ ಕೆಲಸ ಮಾಡುವ ಕಾರ್ಮಿಕರಿಗೆ ಆಯಾ ಸಂಸ್ಥೆಯ ಮುಖ್ಯಸ್ಥರೇ ಗುರುತಿನ ಚೀಟಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಇದರಿಂದ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಕಾರ್ಮಿಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜಾಗೃತಿ ಕಾರ್ಯಕ್ರಮ|
ಗೈರಾದವರಿಗೆ ನೋಟಿಸ್|
ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಶಿಕ್ಷಣ, ಶಾಲಾ ದಾಖಲಾತಿ, ಉದ್ಯೋಗ ಮತ್ತು ಇತರೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಕೌಶಲ್ಯಾಭಿವೃದ್ದಿ ಇಲಾಖೆ ಸಹಯೋಗದೊಂದಿಗೆ ಸಮಾಜ ಕಲ್ಯಾಣ ಇಲಾಖೆಯು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.
ಈ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದ ಅವರು, ತಮ್ಮ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಇಂತಹ ಜಾಗೃತಿ ಕಾರ್ಯಕ್ರಮಕ್ಕೆ ಗೈರಾದ ಅಧಿಕಾರಿ ಅಥವಾ ಸಿಬ್ಬಂದಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಿದರು.
ಅಪಘಾತ ವಿಮೆ ಕಡ್ಡಾಯಗೊಳಿಸಿ|
ಡಿಸಿ ಕವಳಿಕಟ್ಟಿ ಸೂಚನೆ|
ಪೌರ ಕಾರ್ಮಿಕರ ಆರೋಗ್ಯದ ಬಗ್ಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ವೇತನ ಖಾತೆಗಳಿಗೆ ಅಪಘಾತ ವಿಮೆ ಕವರ್ ಆಗುವ ಪಿಎಂಜೆಜೆಬಿವೈ ಮತ್ತು ಪಿಎಂ ಎಸ್ಬಿವೈ ಪಾಲಿಸಿಗಳನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದು ಸೂಚಿಸಿದರು.
ಹೊರ ಗುತ್ತಿಗೆ ನೌಕರರಿಗೆ ರೂ.20 ಲಕ್ಷದವರೆಗೆ ಅಪಘಾತ ವಿಮೆ ಮೊತ್ತ ಬರುವಂತಹ, ವಾರ್ಷಿಕವಾಗಿ ರೂ.1000 ಕಟ್ಟುವ ವಿಮೆಯನ್ನು ಮಾಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನೇಮಕಾತಿಯಲ್ಲಿ ಗೋಲ್ಮಾಲ್
ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಡಿಸಿ|
ಖಾಸಗಿ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಗುತ್ತಿಗೆದಾರರು ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳುವಲ್ಲಿ ಗೋಲ್ಮಾಲ್ ನಡೆಸಿರುವ ಬಗ್ಗೆ ಬಂದಿರುವ ದೂರಿನ ಬಗ್ಗೆ ಪ್ರಸ್ತಾಪಿಸಿದ ಡಿಸಿ ಪ್ರಭುಲಿಂಗ ಕವಳಿಕಟ್ಟಿ,
ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಂಡು, ಬಳಿಕ ಕಡಿಮೆ ಕಾರ್ಮಿಕರಿಂದ ಹೆಚ್ಚಿನ ಕೆಲಸವನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ನಾಮ ನಿರ್ದೇಶಿತ ಸದಸ್ಯರು ಗಮನಕ್ಕೆ ತಂದಿದ್ದಾರೆ. ಈ ರೀತಿ ಆಗದಂತೆ ಕ್ರಮ ವಹಿಸಬೇಕು ಇಲ್ಲವಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಎಚ್ಚರಿಕೆ ನೀಡಿದರು.
ಈ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪರಿಶೀಲಿಸುವಂತೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಿ.ಮಲ್ಲೇಶಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಮನಿರ್ದೇಶಿತ ಸದಸ್ಯರಾದ ಚಿನ್ನಯ್ಯ, ಭಾನುಪ್ರಕಾಶ್ ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.








