ಸಿಎಂ ಹುದ್ದೆಗೆ ವಿದಾಯ ಹೇಳಿದ ಸಿದ್ದರಾಮಯ್ಯ |ಸಕ್ರಿಯ ರಾಜಕಾರಣಕ್ಕೆ ರಾಜೀನಾಮೆ ಕೊಡಲ್ಲ|ಕೋಮುವಾದಿ ಶಕ್ತಿಗಳ ವಿರುದ್ದ ನಿರಂತರ ಹೋರಾಟ-ಸಿದ್ದರಾಮಯ್ಯ ಪಣ
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತವಾಗಿದೆ. ಸಕ್ರಿಯ ರಾಜಕಾರಣಕ್ಕಲ್ಲ ಎಂದು ತಮ್ಮ ಸಿಎಂ ಸಿದ್ದರಾಮಯ್ಯ ತಮ್ಮ ಅಭಿಮಾನಿಗಳಿಗೆ ಅಭಯ ನೀಡಿದರು.

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ ನೀಡಿದ ಆದೇಶದಂತೇ ಸಿಎಂ ಸಿದ್ದರಾಮಯ್ಯ ಗುರುವಾರದಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆ ಮೂಲಕ ಹೈಕಮಾಂಡ ಹೇಳಿದರೇ ರಾಜೀನಾಮೆ ನೀಡುವದಾಗಿ ಹೇಳುತ್ತಿದ್ದ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಬೆಳಗ್ಗೆ ಸಚಿವ ಸಂಪುಟದ ಸದಸ್ಯರ ಜೊತೆ ಉಪಹಾರ ಸೇವಿಸಿದ ನಂತರ ನೇರವಾಗಿ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು.

ಆದರೆ ರಾಜ್ಯಪಾಲ ಥಾವರಚಂದ್ ಅವರು ಬಂದ ನಂತರವೇ ರಾಜೀನಾಮೆ ಅಂಗೀಕಾರವಾಗಲಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಸಂಪುಟದ ಬಹುತೇಕ ಸದಸ್ಯರು ಉಪಸ್ಥಿತರಿದ್ದರು.
48 ವರ್ಷಗಳ ರಾಜಕೀಯ ಪಯಣ|
ಎಳೆಎಳೆಯಾಗಿ ಬಿಚ್ಚಿಟ್ಟ ಸಿದ್ದರಾಮಯ್ಯ|
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಳ್ಳಿಗಾಡಿನಲ್ಲಿ ಹುಟ್ಟಿ ಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ ಎಂದು ಹೇಳಿದರು.
ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ ಸಾಧ್ಯವಾಯಿತು ಎಂದರು.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶವಾಗಿದ್ದಾರೆ.

ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ ಎಂದು ಹೇಳಿದರು.
ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಅದೇ ರೀತಿ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನದಿಂದ ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ ಎಂದು ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದರು.
ಸಕ್ರಿಯ ರಾಜಕಾರಣಕ್ಕೆ ರಾಜೀನಾಮೆ ಕೊಟ್ಟಿಲ್ಲ|
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತವಾಗಿದೆ. ಸಕ್ರಿಯ ರಾಜಕಾರಣಕ್ಕಲ್ಲ ಎಂದು ತಮ್ಮ ಸಿಎಂ ಸಿದ್ದರಾಮಯ್ಯ ತಮ್ಮ ಅಭಿಮಾನಿಗಳಿಗೆ ಅಭಯ ನೀಡಿದರು.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಇದೇ ವೇಳೆ ಸಿದ್ದರಾಮಯ್ಯ ಪಣ ತೊಟ್ಟರು.
ಕಾಲು ಮುಗಿದು ಆಶೀರ್ವಾದ ಪಡೆದ ಡಿಕೆಶಿ|

ಇನ್ನು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಕರೆದಿದ್ದ ಉಪಹಾರ ಕೂಟದಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡರು. ಭಾವುಕರಾಗಿದ್ದ ಡಿಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಅಭಿನಂದಿಸಿದ್ದು ವಿಶೇಷವಾಗಿತ್ತು.
ವರದಿ: ವಿಜಯೀಂದ್ರ ಪಿ.ಹುನಗುಂದ್
ಪ್ರಧಾನ ಸಂಪಾದಕ
ನ್ಯೂಇಂಡಿಯಾ ಕನ್ನಡ
ಬೆಂಗಳೂರು.









