DistrictShivamogga

ಶಿವಮೊಗ್ಗ: ನೀಟ್ ಪರೀಕ್ಷೆ ಹಿನ್ನೆಲೆ|ಜಿಲ್ಲಾಡಳಿತದಿಂದ ಸಕಲ ಸಿದ್ದತೆ, ಬಿಗಿ ಕ್ರಮ|ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಒಟ್ಟು 4832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಶಿವಮೊಗ್ಗ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಜೂನ್ 21 ರಂದು ಮಧ್ಯಾಹ್ನ 02 ರಿಂದ ಸಂಜೆ 05.15 ರವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದ್ದಾರೆ.‌

ಶುಕ್ರವಾರ ನೀಟ್(ಯುಜಿ)-2026 ಪರೀಕ್ಷೆ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಒಟ್ಟು 4832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಇನ್ನು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೇ ಡ್ಯೂಟಿ ಮ್ಯಾಜಿಸ್ಟ್ರೇಟ್‌ರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಮಾತನಾಡಿ, ಅಭ್ಯರ್ಥಿಗಳು, ಪರೀಕ್ಷೆಗೆ ನಿಯೋಜಿತ ಅಧಿಕಾರಿ, ನೌಕರರು, ಪರೀಕ್ಷೆಗೆ ಹಾಜರಾಗಬೇಕಾದ ಸಮಯ, ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು.

ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಅಭ್ಯರ್ಥಿಗಳು ಪರೀಕ್ಷಾ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ವಿನಂತಿಸಿದರು.

ಸಭೆಯಲ್ಲಿ ಡಿಡಿಪಿಯು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಐಎಸ್‌ಎಫ್ ಅಧಿಕಾರಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

Follow Us

Leave a Reply

Your email address will not be published. Required fields are marked *

Back to top button