ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ! ಪಾರದರ್ಶಕ ಪರೀಕ್ಷೆ ನಡೆಸಲು ಕಟ್ಟುನಿಟ್ಟಿನ ಕ್ರಮ|ಶಿವಮೊಗ್ಗ ಜಿಲ್ಲಾಡಳಿತ ಸಂಪೂರ್ಣ ಸಜ್ಜು
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಈಗಾಗಲೇ ಇಂಟರ್ನೆಟ್ ವ್ಯವಸ್ಥೆ, ಯುಪಿಎಸ್ ಸಿಸ್ಟಮ್ ದಕ್ಷತೆ ಖಾತ್ರಿ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ

ಶಿವಮೊಗ್ಗ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗೆ ಕ್ಷಣಗಣನೆ ಆರಂಭಗೊಂಡಿದೆ. ಬುಧವಾರದಿಂದ ಆರಂಭಗೊಳ್ಳುವ ಪರೀಕ್ಷೆಗೆ ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದೇ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಶಿವಮೊಗ್ಗ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.
ಮಾರ್ಚ್ 18ರಿಂದ ಏಪ್ರಿಲ್ 4 ರವರೆಗೆ ಶಿವಮೊಗ್ಗ ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ 9 ಲಕ್ಷ, ಶಿವಮೊಗ್ಗದಲ್ಲಿ 23,883 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ತಾಲ್ಲೂಕುಗಳಲ್ಲಿ ಎಷ್ಟು ಪರೀಕ್ಷಾ ಕೇಂದ್ರ?
ಶಿವಮೊಗ್ಗ-20,ಭದ್ರಾವತಿ-15,ಹೊಸನಗರ-7,ಸಾಗರ-6, ಶಿಕಾರಿಪುರ-11 ,ಸೊರಬ-10,ತೀರ್ಥಹಳ್ಳಿ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಡಿಸಿ ಕವಳಿಕಟ್ಟಿ ನೇತೃತ್ವದಲ್ಲಿ ವೆಬ್ ಕಾಸ್ಟಿಂಗ್!

ಪರೀಕ್ಷೆ ಸುಗಮವಾಗಿ ಪಾರದರ್ಶಕವಾಗಿ ನಡೆಸಲು ಮತ್ತು ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ವೀಕ್ಷಣೆ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ನಡೆಯಲಿದೆ. ಇನ್ನೂ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಒತ್ತಡ ರಹಿತ ವಾತಾವರಣವಿರಲಿದೆ.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಈಗಾಗಲೇ ಇಂಟರ್ನೆಟ್ ವ್ಯವಸ್ಥೆ, ಯುಪಿಎಸ್ ಸಿಸ್ಟಮ್ ದಕ್ಷತೆ ಖಾತ್ರಿ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ
ಪರೀಕ್ಷೆಗಳ ಉಸ್ತುವಾರಿಗೆ 79 ನೋಡಲ್ ಅಧಿಕಾರಿಗಳು!
ಪರೀಕ್ಷೆ ನಡೆಸಲು 31 ಮಾರ್ಗಸೂಚಿ ರಚಿಸಲಾಗಿದೆ. 79 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಒದಗಿಸುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮನವಿ ಮಾಡಲಾಗಿದೆ.
ಸೈಬರ್, ಜೆರಾಕ್ಸ್ ಅಂಗಡಿ ಬಂದ್!
ಪರೀಕ್ಷಾ ಕೇಂದ್ರಗಳ ಸುತ್ತ 2೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ.
ಪರೀಕ್ಷಾ ಮಂಡಳಿ ಮಾರ್ಗಸೂಚಿಯಲ್ಲೇನಿದೆ?

1.ಪ್ರವೇಶ ಪತ್ರ (Hall Ticket): ಅಧಿಕೃತ ಪ್ರವೇಶ ಪತ್ರವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನಿಷೇಧವಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ ಕಡ್ಡಾಯವಾಗಿ ತರತಕ್ಕದ್ದು.
2) ಪರೀಕ್ಷೆ ಆರಂಭವಾಗುವ ಕನಿಷ್ಠ 30 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಇರಬೇಕು. ತಡವಾಗಿ ಬರುವವರಿಗೆ ಅವಕಾಶ ನಿರಾಕರಿಸಲಾಗುವುದು.
3) ಎಲೆಕ್ಟ್ರಾನಿಕ್ ವಸ್ತುಗಳ ನಿಷೇಧ: ಮೊಬೈಲ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಕೊಠಡಿಯೊಳಗೆ ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
4) ಸಿಸಿಟಿವಿ ಕಣ್ಗಾವಲು: ಪ್ರತಿಯೊಂದು ಪರೀಕ್ಷಾ ಕೇಂದ್ರವು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿರುತ್ತದೆ.
ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ!
ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರೀಕ್ಷಾ ದಿನಗಳಂದು ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದ್ದು ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಈ ಸೌಲಭ್ಯ ಪಡೆಯಬಹುದಾಗಿದೆ.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷಾ ಅಕ್ರಮ ಮಾಹಿತಿ, ಸಲಹೆಗಾಗಿ ಸಹಾಯವಾಣಿ ಆರಂಭಿಸಿದ್ದು 08023310075/76 ಗೆ ಕರೆ ಮಾಡಬಹುದು.
ವಿಶೇಷ ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







