5ಕೆಜಿ ಅಕ್ಕಿ ಬದಲು “ಇಂದಿರಾ ಆಹಾರ ಕಿಟ್” ಯೋಜನೆ ಜಾರಿ|ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಇಂದಿರಾ ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಾಗಿ “ಇಂದಿರಾ ಆಹಾರ ಕಿಟ್” ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು ಎಂದು ತಿಳಿಸಿದರು.
ಸಿಎಂ ಕಾವೇರಿ ನಿವಾಸದಲ್ಲಿ ಸೋಮವಾರದಂದು ನಡೆದ “ಇಂದಿರಾ ಆಹಾರ ಕಿಟ್” ಯೋಜನೆ ಅನುಷ್ಠಾನ ಕುರಿತು ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ಗಳ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ರೂ ವೆಚ್ಚ ಅಂದಾಜಿಸಲಾಗಿದೆ.

ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18,628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12,419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
ಇಂದಿರಾ ಆಹಾರ ಕಿಟ್ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ನಾಫೆಡ್-ಎನ್ಸಿಸಿಎಫ್ನಂತಹ ಕೇಂದ್ರ ಸರಬರಾಜು ಸಂಸ್ಥೆಗಳ ಮೂಲಕ ಅಥವಾ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿಯಾಗಬಾರದು ಎಂದು ಸಿಎಂ ಖಡಕ್ಕಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ರೀತಿ ಅಳತೆಯಲ್ಲಿ ಹೆಚ್ಚು ಕಡಿಮೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ ಸಿಎಂ, ಅತ್ಯುತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು.
ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಪಾರದರ್ಶಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಸಿಎಂ ಸಿದ್ದರಾಮಯ್ಯ, ಸರಬರಾಜಾದ ಕಿಟ್ಗಳನ್ನು ನಿಗಮದ ಗೋದಾಮು,ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 10ನೇ ತಾರೀಖಿನ ಒಳಗಾಗಿ ವಿತರಣೆ ಮಾಡಬೇಕು ಎಂದು ಹೇಳಿದರು.
ಸಭೆಯಲ್ಲಿ ಆಹಾರ ಖಾತೆ ಸಚಿವ ಕೆ ಹೆಚ್ ಮುನಿಯಪ್ಪ ಹಾಗು ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ವಿಜಯೇಂದ್ರ ಹುನಗುಂದ್
ಪ್ರಧಾನ ಸಂಪಾದಕ
ನ್ಯೂಇಂಡಿಯಾ ಕನ್ನಡ
ಬೆಂಗಳೂರು.






