BelagaviBengaluru UrbanDistrictKarnatakaNationalPoliticalSpecial Stories
Trending

ಸಕ್ಕರೆ ಮಾಲೀಕರ ಜೊತೆ ಸಿಎಂ ಸಭೆ ಫಲಪ್ರದ-ಪ್ರತಿ ಟನ್‌ ಕಬ್ಬಿಗೆ ₹3,300 ದರ ನಿಗದಿ-ಪ್ರತಿಭಟನೆ ಹಿಂಪಡೆಯಲು ಸಿದ್ದರಾಮಯ್ಯ ಮನವಿ

ಇಂದಿನ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ಸಂಬಂಧ ಶುಕ್ರವಾರದಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರೊಂದಿಗೆ ಪ್ರತ್ಯೇಕ ಸಭೆಯ ನಂತರ ರಾಜ್ಯ ಸರ್ಕಾರ ಕೊನೆಗೂ ಒಂದು ನಿರ್ಧಾರಕ್ಕೆ ಬಂದಿದ್ದು, ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸತತ ಏಳು ಗಂಟೆಗಳ ನಿರಂತರ ಸಭೆಯ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.

ನಾಡಿನ ರೈತರ ಹಿತವನ್ನೇ ಮುಖ್ಯವಾಗಿಸಿಕೊಂಡು ದೃಢ ನಿರ್ಧಾರಕ್ಕೆ ಬಂದಿದ್ದೇವೆ. ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ ₹50 ಸೇರಿಸಿ ರೈತರಿಗೆ ಟನ್ ಗೆ ₹3,300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು, ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸ್ವಾಮದ್ದು, ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ ಎಂದು ಹೇಳಿದರು.

ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ ಎಫ್ಆರ್‌ಪಿ ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ.

ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು.

ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

10.25 ಇಳುವರಿ ಇರುವ ಕಬ್ಬಿಗೆ 3,100 ರೂ, 11.25 ಇಳುವರಿ ಕಬ್ಬಿಗೆ 3,200 ರೂ. ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮಾತುಕತೆ ನಡೆಸಿದರೂ ರೈತರು ಒಪ್ಪಿಲ್ಲ.

ಬಳಿಕ ಸಂಪುಟ ಸಭೆಯಲ್ಲಿ ಚರ್ಚಿಸಿ, “ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದು ಹೇಳಿದರು.

ಸಂಪುಟ ಸಭೆಯ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ.

ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100 ರೂ. ಹೆಚ್ಚಳ ಆಗಲಿದೆ ಎಂದರು.

ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ 10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್‌ಗೆ ರೂ.3,550 ನಿಗದಿಪಡಿಸಿದೆ.

ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ಇಂದಿನ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ.

ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಮುಂದಾಬೇಕೆಂದು ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮನವಿ ಮಾಡಿದ್ದು,

ರೈತರು ಸಹ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡು, ಕಾನೂನು ಸುವ್ಯವಸ್ಥೆ ಸುಗಮವಾಗಲು ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಪತ್ರಿಕಾಗೋಷ್ಠಿಗೂ ಮುನ್ನ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ವಿಧಾನಸೌಧದ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗು ಕಬ್ಬು ಬೆಳೆಗಾರರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌ , ಕಾನೂನು ಸಚಿವ ಎಚ್‌ ಕೆ ಪಾಟೀಲ್‌, ಭಾರಿ ನೀರಾವರಿ ಸಚಿವ ಎಂ ಬಿ ಪಾಟೀಲ್‌, ಸಕ್ಕರೆ ಸಚಿವ ಶಿವಾನಂದ್‌ ಪಾಟೀಲ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button